ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಮಂಕಾಗಿದ್ದು, ಬಿಸಿಲಿನ ತಾಪಮಾನ ಏರಿಕೆಯಾಗಿದೆ. ಆದಾಗ್ಯೂ, ಹವಾಮಾನ ಇಲಾಖೆಯು ಮುಂಗಾರು ಮಳೆ (Monsoon Update) ಮತ್ತೆ ಚುರುಕಾಗುವ ಸುಳಿವು ನೀಡಿದೆ.
ಮುಖ್ಯವಾಗಿ ಜೂನ್ 20 ಮತ್ತು 21 ರಂದು ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು, ಮುಂಜಾಗ್ರತಾ ಕ್ರಮವಾಗಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ತಾಪಮಾನ ಏರಿಕೆ ಮತ್ತು ಮಳೆ ಕೊರತೆ: ರಾಜ್ಯದ ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 5.1 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಹೆಚ್ಚಾಗಿ ದಾಖಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಉಷ್ಣಾಂಶವು ಸಾಮಾನ್ಯಕ್ಕಿಂತ 3 ರಿಂದ 5 ಡಿಗ್ರಿ ಸೆಲ್ಸಿಯಸ್ ಅಧಿಕವಾಗಿರುವುದು ಜನಸಾಮಾನ್ಯರಿಗೆ ಬಿಸಿಲ ಬೇಗೆಯನ್ನು ಹೆಚ್ಚಿಸಿದೆ.
ಆದಾಗ್ಯೂ, ಕರಾವಳಿ ಮತ್ತು ಒಳನಾಡಿನ ವಿವಿಧ ಭಾಗಗಳಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಸುಳಿಗಾಳಿಯ ಪ್ರಭಾವದಿಂದಾಗಿ ಮಳೆ ಚಟುವಟಿಕೆಗಳು ಪುನರಾರಂಭಗೊಳ್ಳಲಿವೆ.
ಯಾವ ಜಿಲ್ಲೆಗಳಿಗೆ ಅಲರ್ಟ್?
- ಜೂನ್ 20 ಮತ್ತು 21: ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಈ ಭಾಗದಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.
ಮುಂದಿನ ಒಂದು ವಾರದ ಹವಾಮಾನ ಸ್ಥಿತಿಗತಿ:
- ಜೂನ್ 17 ರಿಂದ 19 ರವರೆಗೆ: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಈ ಅವಧಿಯಲ್ಲಿ ಉತ್ತರ ಒಳನಾಡಿನ ರಾಯಚೂರು, ವಿಜಯಪುರ, ಬೀದರ್ ಮತ್ತು ಬಾಗಲಕೋಟೆಯಲ್ಲಿ ಗಾಳಿಯ ವೇಗ ಹೆಚ್ಚಿರಲಿದೆ.
- ಜೂನ್ 20 ರಿಂದ 21 ರವರೆಗೆ: ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಮಳೆ ಚುರುಕುಗೊಳ್ಳಲಿದ್ದು, ದಕ್ಷಿಣ ಒಳನಾಡಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗಲಿದೆ.
- ಜೂನ್ 22 ರಿಂದ 23 ರವರೆಗೆ: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರದ ಹವಾಮಾನ: ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಗರಿಷ್ಠ ತಾಪಮಾನ 32 ಡಿಗ್ರಿ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಅಲ್ಲಲ್ಲಿ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಂಭವವಿದೆ.
ಈ ಕೇಳಗಿನ ಸುದ್ದಿಗಳನ್ನು ಓದಿ:
Gruhalakshmi New Guidelines: ಗೃಹಲಕ್ಷ್ಮಿ ಯೋಜನೆಗೆ ಹೊಸ ಗೈಡ್‌ಲೈನ್ಸ್
ಪಿಎಂ ಕಿಸಾನ್ ಸಮ್ಮಾನ್ ನಿಧಿ 23 ನೇ ಕಂತಿನ ಹಣವನ್ನು ಬಿಡುಗಡೆ ದಿನಾಂಕ ನಿಗದಿ