ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಜೂನ್ 27 ರಿಂದ ಜೂನ್ 30 ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ 14 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಲಾಗಿದೆ.
ಉತ್ತರ ಕರ್ನಾಟಕ ಮತ್ತು ಕರಾವಳಿಯಲ್ಲಿ ಮಳೆ:
ಬೆಂಗಳೂರು ಹವಾಮಾನ ಕೇಂದ್ರದ ವರದಿ ಪ್ರಕಾರ, ಜೂನ್ 27 ರಿಂದ ಜೂನ್ 29ರ ಮುಂಜಾನೆಯವರೆಗೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿರಲಿದೆ. ಬೀದರ್, ಕಲಬುರಗಿ, ಯಾದಗಿರಿ ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗಲಿದೆ.
ಜೂನ್ 29ರ ನಂತರ ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಕೊಂಚ ತಗ್ಗಲಿದ್ದು, ಅಲ್ಲಿನ ಎಚ್ಚರಿಕೆಯನ್ನು ಹಿಂಪಡೆಯಲಾಗುತ್ತದೆ. ಆದರೆ, ಮಳೆಯ ತೀವ್ರತೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದತ್ತ ವಾಲಲಿದ್ದು, ಜೂನ್ 29 ಹಾಗೂ 30 ರಂದು ಈ ಭಾಗಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ದಕ್ಷಿಣ ಒಳನಾಡು ಹಾಗೂ ಬೆಂಗಳೂರು ಹವಾಮಾನ:
ಉತ್ತರ ಕರ್ನಾಟಕಕ್ಕೆ ಹೋಲಿಸಿದರೆ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಮಂಡ್ಯ, ಹಾಸನ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯ ಪ್ರಮಾಣ ಕಡಿಮೆಯಿರಲಿದೆ. ಈ ಭಾಗಗಳಿಗೆ ಹವಾಮಾನ ಇಲಾಖೆ ಯಾವುದೇ ಅಲರ್ಟ್ ನೀಡಿಲ್ಲ. ಕೇವಲ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಗರಿಷ್ಠ ತಾಪಮಾನವು 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ.
ಸಾರ್ವಜನಿಕರಿಗೆ ಎಚ್ಚರಿಕೆ:
ಯೆಲ್ಲೋ ಅಲರ್ಟ್ ಎಂದರೆ ವಿಪತ್ತಿನ ಮುನ್ಸೂಚನೆಯಾಗಿದ್ದು, ಈ ಜಿಲ್ಲೆಗಳಲ್ಲಿ ಬಿರುಗಾಳಿ ಮತ್ತು ಸಿಡಿಲಿನ ಅಪಾಯವಿರುತ್ತದೆ. ಆದ್ದರಿಂದ, ಸಾರ್ವಜನಿಕರು ಮಳೆಯ ಸಂದರ್ಭದಲ್ಲಿ ಬಯಲು ಪ್ರದೇಶದಲ್ಲಿ ಓಡಾಡುವುದು, ಮರಗಳು ಅಥವಾ ವಿದ್ಯುತ್ ಕಂಬಗಳ ಕೆಳಗೆ ಆಶ್ರಯ ಪಡೆಯುವುದನ್ನು ತಪ್ಪಿಸಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ.
ಯೆಲ್ಲೋ ಅಲರ್ಟ್ ಇರುವ ಜಿಲ್ಲೆಗಳು:
ಜೂನ್ 27 ಮತ್ತು 28 ರಂದು ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ, ಗುಡುಗು-ಮಿಂಚು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂನ್ 29 ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂನ್ 30 ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಕೇಳಗಿನ ಸುದ್ದಿಗಳನ್ನು ಓದಿ: